ಬೆಂಗಳೂರು: ‘ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಮಂಡಳಿಗೆ ಮುಂದಿನ ಮೂರು ವಾರಗಳಲ್ಲಿ ಅಧ್ಯಕ್ಷ ಮತ್ತು ಸದಸ್ಯರನ್ನು ಭರ್ತಿ ಮಾಡಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. | |
‘ರೇರಾ ಮೇಲ್ಮನವಿ ನ್ಯಾಯಮಂಡಳಿಗೆ ಮುಖ್ಯಸ್ಥರನ್ನು ನೇಮಿಸಲು ನಿರ್ದೇಶಿಸಬೇಕು’ ಎಂದು ಕೋರಿ ಮ್ಯಾಥ್ಯೂ ಥಾಮಸ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. | |
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ‘ರೇರಾದ ಒಬ್ಬ ಸದಸ್ಯ 2024ರ ಏಪ್ರಿಲ್ನಲ್ಲಿ ನಿವೃತ್ತರಾಗಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಸದಸ್ಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ತಿಳಿಸಿದರು. | |
ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ರೇರಾದ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯಲ್ಲಿ ವಿಳಂಬ ಮಾಡಬಾರದು. ಸದಸ್ಯರ ನಿವೃತ್ತಿ ನಂತರ ತಕ್ಷಣವೇ ಅಧಿಕಾರ ವಹಿಸಿಕೊಳ್ಳುವಂತಿರಬೇಕು’ ಎಂದು ಸೂಚಿಸಿ ವಿಚಾರಣೆ ಮುಂದೂಡಿತು. | |
ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ, ‘ರಾಜ್ಯ ಸರ್ಕಾರ ಅಧ್ಯಕ್ಷರನ್ನು ನೇಮಕ ಮಾಡದೇ ಇರುವ ಕಾರಣ ನ್ಯಾಯಮಂಡಳಿ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಹೈಕೋರ್ಟ್ನಲ್ಲಿ ಬಾಕಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. | |
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. | |