ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌‌ 'ಸಾಲರಾಮಯ್ಯನ ಸೋಗಲಾಡಿ' ಬಜೆಟ್ ಆಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡಕಸುಬಿ' ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ' ಎಂದು ದೂರಿದ್ದಾರೆ. ‘ಸಾಧನೆಯ ಬಲದಿಂದಾಗಲಿ, ಅಭಿವೃದ್ಧಿ ಕೆಲಸಗಳಿಂದಾಗಲಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯ ‌ಅವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನ ಚುನಾವಣಾ ಭಾಷಣದಂತೆ ದುರ್ಬಳಕೆ ಮಾಡಿಕೊಂಡು ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ'. ಸಿದ್ದರಾಮಯ್ಯನವರು ತಮ್ಮ ಮೊದಲ ಅವಧಿಯಲ್ಲಿ ಮಾಡಿದ ಅತಿದೊಡ್ಡ ಸಾಧನೆ ಎಂದರೆ ಒಂದು ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೆ ₹44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದು. ಆ ಭಾಗ್ಯ ಈ ಭಾಗ್ಯ ಎಂದು ಎಂದು ರಾಜ್ಯದ ಜನತೆಯ ಮೇಲೆ ಸಾಲ ಭಾಗ್ಯ ಹೊರಿಸಿ ಹಳಿ ತಪ್ಪಿಸಿದ್ದ ರಾಜ್ಯದ ವಿತ್ತೀಯ ಶಿಸ್ತನ್ನ ಬಿಜೆಪಿ ಸರ್ಕಾರ ಕೋವಿಡ್ ಸಂಕಷ್ಟದ ಹೊರತಾಗಿಯೂ ಸರಿದಾರಿಗೆ ತಂದಿತ್ತು. ಆದರೆ ಈಗ ತಮ್ಮ 2ನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. ‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು' ಎಂಬುದು ಈ ಸರ್ಕಾರದಲ್ಲಿ 'ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ' ಎಂಬಂತಾಗಿದೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್ ಎಂದು ಅಶೋಕ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಅಂಶಗಳೇ ಇಲ್ಲ. ಇದನ್ನು ಖಂಡಿಸಿ, ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಉಭಯ ಸದನಗಳ ಸದಸ್ಯರು ಉಪಸ್ಥಿತರಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.